ಬೆಂಗಳೂರು: ಸನಾತನ ಧರ್ಮ ಟೀಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರ ಪ್ರದೇಶದಲ್ಲಿ ಎಫ್ಐಆರ್ ದಾಖಲಾಗಿದೆ. ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ವಿವಾದಿತ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಪ್ರಿಯಾಂಕ್ ಖರ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಇದೀಗ ಉದಯನಿಧಿ ಸ್ಟಾಲಿನ್ ಮತ್ತು ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರ ಪ್ರದೇಶದ ರಾಂಪುರದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಹಿರಿಯ ವಕೀಲರಾದ ಹರ್ಷಗುಪ್ತಾ ಮತ್ತು ರಾಮ್ ಸಿಂಗ್ ಲೋಧಿ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 295 ಎ (ಧಾರ್ಮಿಕ ಭಾವನೆಗೆ ಧಕ್ಕೆ) ಹಾಗೂ 153 ಎ (ಗುಂಪುಗಳ ನಡುವೆ ದ್ವೇಷಕ್ಕೆ ಉತ್ತೇಜನ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
- ಅಷ್ಟಕ್ಕೂ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?
ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಯಾವ ಸಂದರ್ಭದಲ್ಲಿ ಹೇಳಿಕೆ ನೀಡಿದ್ದಾರೆ ಎಂಬವುದು ಗೊತ್ತಿಲ್ಲ. ಆದ್ರೆ ಯಾವ ಧರ್ಮದಲ್ಲಿ ಸಾಮಾಜಿಕ ಸಮಾನತೆ, ಆರ್ಥಿಕ ಸಮಾನತೆ ಇಲ್ಲವೋ ಅದು ಧರ್ಮ ಅಲ್ಲ. ಮನುಷ್ಯರ ನಡುವೆ ಭೇದ-ಭಾವ ಇರೋದು ಧರ್ಮ ಅಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದರು.