ವಿಜಯಪುರ: ಜಿಲ್ಲೆಯಲ್ಲಿ ಈ ವರ್ಷದ ಮುಂಗಾರು ಹಂಗಾಮಿನಲ್ಲಿ 60%ಕ್ಕಿಂತಲೂ ಹೆಚ್ಚಿನ ಮಳೆಯ ಕೊರತೆ ಆಗಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸಲ್ಲಿಸಿರುವ ವರದಿಯನ್ನು ಆಧರಿಸಿ ರೈತ ಸಮುದಾಯಕ್ಕೆ ಹೆಚ್ಚಿನ ನೆರವು ನೀಡುವಂತೆ ಕೋರಿ ಜಿಲ್ಲಾ ಉಸ್ತುವಾರಿ ಮತ್ತು ಭಾರೀ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡಕ್ಕೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಸಚಿವರು ಅಮೆರಿಕ ಪ್ರವಾಸದಲ್ಲಿ ಇರುವ ಕಾರಣ ಅವರ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಬರ ಅಧ್ಯಯನ ತಂಡಕ್ಕೆ ನೀಡಲಾಯಿತು. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ತಿಕೋಟಾ ತಾಲೂಕನ್ನು ಕೈಬಿಟ್ಟಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಈ ತಾಲೂಕಿನಲ್ಲಿ ಮುಂಗಾರಿನಲ್ಲಿ ಕೇವಲ ಒಂದು ದಿನ ಮಾತ್ರ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.
ಈ ಬಗ್ಗೆ ಜಿಲ್ಲಾಧಿಕಾರಿಗಳು ಸೆ.1ರಂದೇ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಜೊತೆಗೆ ತಾವೂ ಸಹ ವೈಯಕ್ತಿಕವಾಗಿ ಸೆ.14ರಂದು ಮುಖ್ಯಮಂತ್ರಿಗಳಿಗೆ ಮತ್ತು ಕಂದಾಯ ಸಚಿವರಿಗೆ ಪತ್ರ ಬರೆದು ಈ ವಿಚಾರವನ್ನು ಗಮನಕ್ಕೆ ತಂದಿದ್ದೇನೆ. ಹೀಗಾಗಿ ಕೇಂದ್ರ ತಂಡವು ಈ ವಾಸ್ತವಾಂಶವನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ವಿವರಿಸಿದ್ದಾರೆ.