ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಆರ್.ಡಿ. ಪಾಟೀಲನನ್ನು ಬಂಧಿಸುವಲ್ಲಿ ವಿಳಂಬ ಮಾಡಿ, ತಪ್ಪಿಸಿಕೊಳ್ಳಲು ಅನುವು ಮಾಡಿಕೊಟ್ಟಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಅಫಜಲಪುರ ಪೊಲೀಸ್ ಠಾಣೆಯ ಸಿಪಿಐ ಪಂಡಿತ ವಿ. ಸಗರ ಅವರನ್ನು ಅಮಾನತು ಮಾಡಲಾಗಿದೆ.
ಕರ್ತವ್ಯ ನಿರ್ಲಕ್ಷ್ಯ ಆರೋಪದ ಅಡಿಯಲ್ಲಿ ಪಂಡಿತ ವಿ. ಸಗರ ಅವರನ್ನು ಅಮಾನತು ಮಾಡಿ ಕಲಬುರಗಿ ಐಜಿಪಿ ಅಜಯ್ ಹಿಲೋರಿ ಅವರು ಆದೇಶ ಹೊರಡಿಸಿದ್ದಾರೆ.
ಕೆಇಎ ನೇಮಕಾತಿ ಪರೀಕ್ಷಾ ಅಕ್ರಮದ ಬಳಿಕ ತಲೆ ಮರೆಸಿಕೊಂಡಿದ್ದ ಆರ್.ಡಿ. ಪಾಟೀಲ, ನಗರದ ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಾಗಿದ್ದ. ನವೆಂಬರ್ 6ರಂದು ಬೆಳಿಗ್ಗೆ ಈ ಬಗ್ಗೆ ಮಾಹಿತಿ ಲಭಿಸಿದರೂ ಬಂಧಿಸಲು ತಕ್ಷಣ ತೆರಳದೇ ವಿಳಂಬ ಮಾಡಿದ್ದ ಆರೋಪ ಪಂಡಿತ ಅವರ ಮೇಲೆ ಕೇಳಿಬಂದಿತ್ತು. ಈ ಕಾರಣಕ್ಕಾಗಿಯೇ ಅವರನ್ನು ಅಮಾನತು ಮಾಡಲಾಗಿದೆ ಎನ್ನಲಾಗುತ್ತಿದೆ.