ವಿಜಯಪುರ: ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವುದರಿಂದ ಮುಂದಿನ 6 ತಿಂಗಳ ಅವಧಿಗೆ ಕುಡಿಯುವ ನೀರಿಗಾಗಿ ಯಾವುದೇ ಸಮಸ್ಯೆ ಬಾರದಂತೆ ಮುಂಜಾಗ್ರತೆ ಕ್ರಮವಾಗಿ ಯೋಜನೆ ಸಿದ್ಧಪಡಿಸಿಟ್ಟುಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಕೇಸ್ವಾನ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯ ವಿವಿಧ ತಹಶೀಲ್ದಾರಗಳು, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಅಭಿಯಂತರನ್ನೊಳಗೊಂಡ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಹಾಗೂ ಕುಡಿಯುವ ನೀರಿನ ನಿರ್ವಹಣೆ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾದಿಕಾರದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಬಹುಹಳ್ಳಿ ಕುಡಿಯುವ ನೀರಿನ ಯೋಜನೆಯ ಕೆರೆಗಳಲ್ಲಿ ಶೇಖರಿಸಿಟ್ಟಿರುವ ನೀರಿನ್ನು ಕುಡಿಯುವ ನೀರಿಗಾಗಿ ಬಳಕೆ ಮಾಡಿಕೊಳ್ಳಲು ಹಗಲು ರಾತ್ರಿ ಸಿಬ್ಬಂದಿಗಳನ್ನು ನಿಯೋಜಿಸಿ ನಿಗಾ ವಹಿಸಬೇಕೆಂದು ಸೂಚಿಸಿದರು.