ಕಲಬುರ್ಗಿ : ಪೋಲಿಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು : ಕುಟುಂಬಸ್ಥರಿಂದ ಪ್ರತಿಭಟನೆ…!
ಕಲಬುರಗಿಯ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರು ವಶದಲ್ಲಿದ್ದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಇದು ಕಸ್ಟಡಿ ಕೊಲೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಶರಣ ಸಿರಸಗಿ ಮಡ್ಡಿಯ ನಿವಾಸಿ ಉದಯಕುಮಾರ ಪರದಿ ಅವರು ಪೊಲೀಸ್ ಕಸ್ಟಡಿಯಲ್ಲಿದ್ದಾಗ ಮೃತಪಟ್ಟಿದ್ದಾರೆ. ಪೊಲೀಸರು ಹೊಡೆದಿದ್ದರಿಂದಲೇ ಉದಯಕುಮಾರ್ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಕುಟುಂಬಸ್ಥರು ಮತ್ತು ಗ್ರಾಮಸ್ಥರು ಕಲಬುರಗಿ ಜಿಲ್ಲಾಸ್ಪತ್ರೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.
“ಉದಯಕುಮಾರ ಅವರನ್ನು ಕಳ್ಳತನ ಪ್ರಕರಣದ ಆರೋಪದಲ್ಲಿ ಗುರುವಾರ ಬೆಳಿಗ್ಗೆ ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದರು. ಮಧ್ಯಾಹ್ನ 1 ಗಂಟೆ ಸುಮಾರಿಗೆ ಪೊಲೀಸರು ಕರೆ ಮಾಡಿ, ಆಸ್ಪತ್ರೆಗೆ ದಾಖಲಿಸಿರುವುದಾಗಿ ಹೇಳಿದರು. ಆಸ್ಪತ್ರೆಗೆ ಹೋಗಿ ನೋಡುವಷ್ಟರಲ್ಲಿ ಉದಯಕುಮಾರ್ ಮೃತಪಟ್ಟಿದ್ದರು. ಅವರ ದೇಹದ ಮೇಲೆ ಗಾಯದ ಗುರುತುಗಳಿವೆ” ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
“ಪೊಲೀಸರ ವಶದಲ್ಲಿದ್ದ ವ್ಯಕ್ತಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧ ಕುಟುಂಬಸ್ಥರು ನೀಡಿರುವ ದೂರಿನ ಆಧಾರದ ಮೇಲೆ ಪ್ರಕರಣ ದಾಖಲು ಮಾಡಿಕೊಳ್ಳಲಾಗುವುದು. ಸಿಐಡಿ ತನಿಖೆಗೆ ವರ್ಗಾವನೆ ಮಾಡಲಾಗುವುದು” ಎಂದು ಪೊಲೀಸ್ ಆಯುಕ್ತ ಚೇತನ್ ಆರ್ ಹೇಳಿದ್ದಾರೆ.