ಬೆಂಗಳೂರು: ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅತ್ಯಂತ ಹಿಂದುಳಿದ ವರ್ಗವಾದ ಗೊಲ್ಲ ಸಮುದಾಯದ ಹಿರಿಯ ಕಾಂಗ್ರೆಸ್ ಮುಖಂಡರಾದ ದಿವಂಗತ ಎ.ಕೃಷ್ಣಪ್ಪ ಅವರ ಪುತ್ರಿ, ಮಾಜಿ ಶಾಸಕಿ ಪೂರ್ಣಿಮಾ ಕೃಷ್ಣಪ್ಪ ಮತ್ತು ಕೃಷ್ಣಪ್ಪ ಅವರ ಅಳಿಯ ಶ್ರೀನಿವಾಸ್, ಕೆ.ನರಸಿಂಹನಾಯಕ್ ಸೇರಿದಂತೆ 750 ಕ್ಕೂ ಹೆಚ್ಚು ಬಿಜೆಪಿಯ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಪೂರ್ಣಿಮಾ ಮತ್ತು ಶ್ರೀನಿವಾಸ್ ಸಾಮಾಜಿಕ ನ್ಯಾಯದ ಪರವಾಗಿರುವವರು. ಒಲ್ಲದ ಮನಸ್ಸಿನಿಂದ ಬಿಜೆಪಿಯಲ್ಲಿದ್ದರು. ಈಗ ಕಾಂಗ್ರೆಸ್ ಗೆ ಬಂದಿದ್ದಾರೆ.
ಇವರಿಗೆ ರಾಜಕೀಯವಾಗಿ ಅನ್ಯಾಯ ಆಗಲು ಬಿಡುವುದಿಲ್ಲ. ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳ ಪರವಾಗಿರುವ ಏಕೈಕ ರಾಷ್ಟ್ರೀಯ ಪಕ್ಷ ನಮ್ಮದು. ಸಾಮಾಜಿಕ ನ್ಯಾಯದಿಂದ ವಂಚಿತರಾದವರ ಧ್ವನಿಯಾಗಿ ಎ.ಕೃಷ್ಣಪ್ಪ, ಪೂರ್ಣಿಮಾ ಮತ್ತು ಶ್ರೀನಿವಾಸ್ ಮೊದಲಿನಿಂದಲೂ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡಿರುವ ಪಕ್ಷ. ಬಿಜೆಪಿ ಜಾತಿ ತಾರತಮ್ಯದಲ್ಲಿ ನಂಬಿಕೆ ಇಟ್ಟುಕೊಂಡಿರುವ ಪಕ್ಷ. ಎಲ್ಲಾ ಜಾತಿಯ ಬಡವರು ಮತ್ತು ಶೂದ್ರ ಸಮುದಾಯದವರು ಇದನ್ನು ಸರಿಯಾಗಿ ಅರ್ಥ ಮಾಡಿಕೊಂಡು ರಾಜಕೀಯ ನಿಲುವು ತೆಗೆದುಕೊಳ್ಳಬೇಕು. ಪೂರ್ಣಿಮಾ, ಶ್ರೀನಿವಾಸ್ ಮತ್ತು ಇವರ ಬೆಂಬಲಿಗರಿಗೆ ಬಿಜೆಪಿಯಲ್ಲಿ ಸಾಮಾಜಿಕ ನ್ಯಾಯ ಇಲ್ಲ ಎನ್ನುವುದು ಸ್ಪಷ್ಟವಾಗಿ ಮನದಟ್ಟಾಗಿದೆ. ಬಿಜೆಪಿಯಲ್ಲಿ ಸಾಮಾಜಿಕ ನ್ಯಾಯದ ಪರವಾಗಿ ನಿಲುವು ಇಟ್ಟುಕೊಂಡಿರುವವರಿಗೆ ಬಹಳ ಕಷ್ಟ ಎನ್ನುವುದು ಇವರನ್ನು ನೋಡಿದಾಗ ಸ್ಪಷ್ಟವಾಗಿದೆ. ಅದಕ್ಕೇ ಇಷ್ಟೊಂದು ಬೃಹತ್ ಪ್ರಮಾಣದಲ್ಲಿ ಹಿಂದುಳಿದ ಸಮುದಾಯಗಳು ಇಂದು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದರು.
ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ವೀರಪ್ಪಮೋಯ್ಲಿ, ಸಚಿವ ಡಿ.ಸುಧಾಕರ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಸೇರಿದಂತೆ ಗೊಲ್ಲ ಸಮುದಾಯದ ರಾಜ್ಯ ಮುಖಂಡರು, ವಿಧಾನ ಪರಿಷತ್ ಸದಸ್ಯರೂ ಆದ ನಾಗರಾಜ ಯಾದವ್ ಸೇರಿದಂತೆ ಹಲವು ಮಂದಿ ಹಿಂದುಳಿದ ಮತ್ತು ಅತಿ ಹಿಂದುಳಿದ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.