ಬೆಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ ಸಂಕಷ್ಟ ಸ್ಥಿತಿ ಎದುರಾಗಿದ್ದು, ಕೇಂದ್ರ ಸರಕಾರವು ಪರಿಣತರ ತಂಡವನ್ನು ಕಳಿಸಿಕೊಟ್ಟು, ವಾಸ್ತವಾಂಶಗಳ ಪರಿಶೀಲನೆಗೆ ಮುಂದಾಗಬೇಕು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಗುರುವಾರ ಆಗ್ರಹಿಸಿದ್ದಾರೆ.
ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ, “ಈ ವಿಷಯದಲ್ಲಿ ಈಗ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಬೇಕು. ಪರಿಣತರ ತಂಡ ಖುದ್ದು ಪರಿಶೀಲಿಸಿದ ನಂತರ ತನ್ನ ವರದಿ ನೀಡಿದ ಮೇಲಷ್ಟೆ ಮುಂದಿನ ಹೆಜ್ಜೆ ಏನೆಂದು ಯೋಚಿಸಬಹುದು. ಇಂತಹ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿಯವರೆಲ್ಲ ಸೇರಿಕೊಂಡು ರಾಜ್ಯದ ಸ್ಥಿತಿಯನ್ನು ಪ್ರಧಾನಿ ಮೋದಿಯವರಿಗೆ ಮನವರಿಕೆ ಮಾಡಿಕೊಡಬೇಕು” ಎಂದರು.