ಶಿವಮೊಗ್ಗ: ಶಿಕಾರಿಪುರ ತಾಲೂಕಿನಲ್ಲಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಬಗನಕಟ್ಟೆ ಗ್ರಾಮ ಪಂಚಾಯಿತಿ ಪಿಡಿಒ ಮಂಜುನಾಥ್ ಗುರುವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ತಾಲ್ಲೂಕಿನ ಸಂಕ್ಲಾಪುರ ನಿವಾಸಿ ಸಾಕಮ್ಮ ಅವರ ಮನೆಯ ಚಾವಣಿ ಮತ್ತು ಗೋಡೆ 2021ರಲ್ಲಿ ಮಳೆಯಿಂದ ಕುಸಿದು ಬಿದ್ದ ಕಾರಣ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಪುನರ್ ನಿರ್ಮಾಣಕ್ಕಾಗಿ ಪರಿಹಾರ ಧನಕ್ಕೆ ಅರ್ಜಿ ಸಲ್ಲಿಸಲಾಗಿತ್ತು.
ಈ ಕುರಿತು ಜಿಪಿಎಸ್ನಲ್ಲಿ ಮಾಹಿತಿ ಸಂಗ್ರಹಿಸಿ ವರದಿ ಮಾಡಲು ಬಗನಕಟ್ಟೆ ಗ್ರಾಮ ಪಂಚಾಯತಿ ಪಿಡಿಒ ಮಂಜುನಾಥ್ ಅವರು ಸಾಕಮ್ಮ ಅವರಿಂದ ₹ 20,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಲ್ಲಿ ₹ 13,000 ಈಗಾಗಲೆ ಪಡೆದಿದ್ದರು. ಬಾಕಿ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪಿಡಿಒ ವಿರುದ್ಧ ಸಾಕಮ್ಮ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಶಿವಮೊಗ್ಗ ಲೋಕಾಯುಕ್ತ ಕಚೇರಿಯ ಪೊಲೀಸ್ ಅಧೀಕ್ಷಕ ಎನ್. ವಾಸುದೇವರಾಮ ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ಉಪಾಧೀಕ್ಷಕ ಉಮೇಶ್, ಈಶ್ವರ ನಾಯ್ಕ, ಪೊಲೀಸ್ ನಿರೀಕ್ಷಕ ಸುರೇಶ್ ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದಾರೆ.